24 Aug 2026

ರಾಜ್ಯ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ: ಜುಲೈ 29, 2026

ಇಳಕಲ್, ಜುಲೈ ೨೯: ಕರ್ನಾಟಕ ಸರ್ಕಾರವು ಪ್ರತಿ ವರ್ಷ ಆಗಸ್ಟ್ ೧ರಂದು ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳು ಅವರ ಜನ್ಮದಿನದ ಅಂಗವಾಗಿ “ರಾಜ್ಯ ವ್ಯಸನ ಮುಕ್ತ ದಿನಾಚರಣೆ”ಯನ್ನು ಆಚರಿಸುತ್ತದೆ. ಈ ಪ್ರಯುಕ್ತ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವತಿಯಿಂದ ಇಂದು ೨೯ ಜುಲೈ ೨೦೨೬, ಬುಧವಾರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಡಾ. ಸಿ. ಎಂ. ಬುದ್ನಿ ಅವರು “ದುಶ್ಚಟಗಳಿಂದಾಗುವ ಪರಿಣಾಮಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಮಾದಕ ದ್ರವ್ಯ ಸೇವನೆ, ಮದ್ಯಪಾನ, ಧೂಮಪಾನ ಹಾಗೂ ಇತರೆ ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯ, ಕುಟುಂಬ, ಶಿಕ್ಷಣ ಮತ್ತು ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ಯುವಜನರು ದುಶ್ಚಟಗಳಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಬಿ. ಬಿ. ಸುಗ್ಗಮದ ವಹಿಸಿದ್ದರು. ಮಹಾವಿದ್ಯಾಲಯದ ಅಧ್ಯಕ್ಷರಾದ ಶ್ರೀ ಬಿ. ವಿ. ಮರಟದ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ವೇದಿಕೆಯ ಮೇಲೆ ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷರಾದ ಶ್ರೀಮತಿ ಅಕ್ಕಮಹಾದೇವಿ ಕೂಡ್ಲೆಪ್ಪನವರ, ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕರಾದ ಶ್ರೀಮತಿ ಎಸ್. ಆರ್. ಕಲ್ಯಾಣಶೆಟ್ಟಿ ಹಾಗೂ ಎನ್‌ಎಸ್‌ಎಸ್ ಅಧಿಕಾರಿಗಳಾದ ಕುಮಾರಿ ಶಶಿಕಲಾ ಓದಾ ಉಪಸ್ಥಿತರಿದ್ದರು.
ವಿಶೇಷ ಉಪನ್ಯಾಸದ ನಂತರ ಡಾ. ಸಿ. ಎಂ. ಬುದ್ನಿ ಅವರನ್ನು ಮಹಾವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀ ಟಿ. ಎಂ. ಕುಲಕರ್ಣಿ ನಿರೂಪಿಸಿದರು. ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ಶ್ರೀಮತಿ ಎಸ್. ಆರ್. ಕಲ್ಯಾಣಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.
ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವಲ್ಲಿ ಈ ವಿಶೇಷ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಯಿತು.

Download